Bhasaka
← Back to home

ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ

Author: ಕನಕದಾಸCategory: ಶ್ರೀಕೃಷ್ಣRaaga: ನಾದನಾಮಕ್ರಿಯೆTaala: ತ್ರಿತಾಲ
ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ ||ಪ|| ವೇದಶಾಸ್ತ್ರ ಪಂಚಾಂಗವ ಓದಿಕೊಂಡು ಅನ್ಯರಿಗೆ ಬೋಧನೆಯ ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ ||1|| ಚಂಡಭಟರಾಗಿ ನಡೆದು ಕತ್ತಿ ಢಾಲು ಕೈಲಿ ಹಿಡಿದು ಖಂಡ ತುಂಡ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ||2|| ಅಂಗಡಿ ಮುಂಗಟ್ಟನ್ಹೂಡಿ ವ್ಯಂಗ್ಯ ಮಾತುಗಳನ್ನಾಡಿ ಭಂಗ ಬಿದ್ದು ಗಳಿಸುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ||3|| ಕುಂಟೆ ತುದಿಗೆ ಕೊರಡು ಹಾಕಿ ಹೆಂಟೆ ಮಣ್ಣು ಸಮನು ಮಾಡಿ ರೆಂಟೆ ಹೊಡೆದು ಬೆಳೆಸುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ||4|| ಬೆಲ್ಲದಂತೆ ಮಾತನಾಡಿ ಎಲ್ಲರನ್ನು ಮರುಳು ಮಾಡಿ ಸುಳ್ಳು ಬೊಗಳಿ ತಿಂಬುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ||5|| ಕೊಟ್ಟಣವನು ಕುಟ್ಟಿಕೊಂಡು ಕಟ್ಟಿಗೆಯನು ಹೊತ್ತುಕೊಂಡು ಕಷ್ಟ ಮಾಡಿ ಉಣ್ಣುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ||6|| ತಾಳ ದಂಡಿಗೆ ಶ್ರುತಿ ಮೇಳ ತಂಬೂರಿಯ ಹಿಡಿದುಕೊಂಡು ಸೂಳೆಯಂತೆ ಕುಣಿಯುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ||7|| ಸಂನ್ಯಾಸಿ ಜಂಗಮ ಜೋಗಿ ಜಟ್ಟಿ ಮೊಂಡ ಬೈರಾಗಿ ನಾನಾ ವೇಷಗಳೆಲ್ಲ ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ||8|| ಹಳ್ಳದಲ್ಲಿ ಕುಳಿತುಕೊಂಡು ಕಲ್ಲು ದೊಣ್ಣೆ ಹಿಡಿದುಕೊಂಡು ಕಳ್ಳತನವ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ||9|| ಅಂದಣ ಪಲ್ಲಕ್ಕಿ ಏರಿ ಮಂದಿ ಮಾರ್ಬಲ ಕೂಡಿ ಚಂದದಿಂದ ಮೆರೆಯುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ||10|| ಉನ್ನತ ಕಾಗಿನೆಲೆಯಾದಿಕೇಶವನಾ ಧ್ಯಾನವನ್ನು ಮನಮುಟ್ಟಿ ಮಾಡುವುದು ಮುಕ್ತಿಗಾಗಿ ಆನಂದಕಾಗಿ ||11||

Thoughts & Reflections

0

No reflections shared yet. Be the first to share your thoughts!

Share your thought