Bhasaka
← Back to home

ಎಲ್ಲಿರುವನೋ ರಂಗ ಎಂಬ ಸಂಶಯ ಬೇಡ

Author: ಕನಕದಾಸCategory: ಶ್ರೀಕೃಷ್ಣRaaga: ಮುಖಾರಿTaala: ಝಂಪೆತಾಳ
ಎಲ್ಲಿರುವನೋ ರಂಗ ಎಂಬ ಸಂಶಯ ಬೇಡ ||ಪ|| ಎಲ್ಲಿ ಭಕ್ತರು ಕರೆಯೆ ಅಲ್ಲಿ ಬಂದೊದಗುವನು ||ಅ|| ತರಳ ಪ್ರಹ್ಲಾದ ಹರಿ ವಿಶ್ವಮಯನೆಂದು ಬರೆದೋದಲವನ ಪಿತ ಕೋಪದಿಂದ ಸ್ಥಿರವಾದಡೀ ಕಂಬದಲಿ ತೋರು ತೋರೆನಲು ಭರದಿಂದ ಬರಲದಕೆ ವೈಕುಂಠ ನೆರೆಮನೆಯೆ ||1|| ಪಾಪ ಕರ್ಮವ ಮಾಡಿದಜಮಿಳನ ಯಮಭಟರು ಕೋಪದಿಂದೆಳೆಯುತಿರೆ ಭೀತಿಯಿಂದ ತಾ ಪುತ್ರನನು ಕರೆಯೆ ಕೇಳಿ ರಕ್ಷಿಸೆ ಶ್ವೇತ ದ್ವೀಪವೀ ಧರೆಗೆ ಸನಿಹದಲ್ಲಿಹುದೆ ||2|| ಕರಿರಾಜನನು ನೆಗಳು ನುಂಗುತಿರೆ ಭಯದಿಂದ ಮೊರೆಯಿಡಲು ಕೇಳಿ ತ್ವರಿತದಲಿ ಬಂದು ಕರುಣದಲಿ ಬಂಧನವ ಪರಿಹರಿಸೆ ಗಜರಾಜ ನಿರುವ ಸರಸಿಯು ಅನಂತಾಸನಕೆ ಮುಮ್ಮನೆಯೆ ||3|| ಕುರುಪತಿಯು ದ್ರೌಪದಿಯ ಸೀರೆಯನು ಸೆಳೆಯುತಿರೆ ತರುಣಿ ಹಾ ಕೃಷ್ಣ ಎಂದೊದರೆ ಕೇಳ್ದು ಭರದಿಂದ ಅಕ್ಷಯಾಂಬರವೀಯೆ ಹಸ್ತಿನಾ ಪುರಿಗೆ ದ್ವಾರಾವತಿಯು ಕೂಗಳತೆಯೆ ||4|| ಅಣು ಮಹತ್ತಿನೊಳೆಲ್ಲ ಪರಿಪೂರ್ಣ ವಿಶ್ವಮಯ ಗಣನೆಯಿಲ್ಲದ ಮಹಾಮಹಿಮನೆನಿಪ ಘನ ಕೃಪಾನಿಧಿ ಕಾಗಿನೆಲೆಯಾದಿಕೇಶವನು ನೆನೆದವರ ಮನದೊಳಿಹನೆಂಬ ಬಿರುದುಂಟಾಗಿ ||5||

Thoughts & Reflections

0

No reflections shared yet. Be the first to share your thoughts!

Share your thought