Bhasaka
← Back to home

ತಲ್ಲಣಿಸದಿರು ಕಂಡ್ಯ ತಾಳು ಮನವೆ (ಸಂಪೂರ್ಣ)

Author: ಕನಕದಾಸCategory: ಶ್ರೀಕೃಷ್ಣRaaga: ಕೇದಾರಗೌಳTaala: ಝಂಪೆತಾಳ
ತಲ್ಲಣಿಸದಿರು ಕಂಡ್ಯ ತಾಳು ಮನವೆ ||ಪ|| ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ ||ಅ|| ಬೆಟ್ಟದಾ ತುದಿಯಲ್ಲಿ ಹುಟ್ಟಿದ ವೃಕ್ಷಕ್ಕೆ ಕಟ್ಟೆಯನು ಕಟ್ಟಿ ನೀರೆರೆದವರು ಯಾರೊ ಪುಟ್ಟಿಸಿದ ಸ್ವಾಮಿ ತಾ ಹೊಣೆಗಾರನಾಗಿರಲು ಗಟ್ಯಾಗಿ ಸಲಹುವನು ಇದಕೆ ಸಂಶಯವಿಲ್ಲ ||1|| ಅಡವಿಯೊಳಗಾಡುವ ಮೃಗ ಪಕ್ಷಿಗಳಿಗೆಲ್ಲ ಅಡಿಗಡಿಗೆ ಆಹಾರವಿತ್ತವರು ಯಾರೊ ಪಡೆದ ಜನನಿಯ ತೆರದಿ ಸ್ವಾಮಿ ಹೊಣೆಗೀಡಾಗಿ ಬಿಡದೆ ರಕ್ಷಿಪನು ಇದಕೆ ಸಂಶಯವಿಲ್ಲ ||2|| ನವಿಲಿಗೆ ಚಿತ್ರ ಬರೆದವರು ಯಾರು ಪವಳದ ಲತೆಗೆ ಕೆಂಪಿಟ್ಟವರು ಯಾರು ಸವಿಮಾತಿನರಗಿಳಿಗೆ ಹಸುರು ಬರೆದವರು ಯಾರು ಅವನೆ ಸಲಹುವನು ಇದಕೆ ಸಂಶಯವಿಲ್ಲ ||3|| ಕಲ್ಲಿನಲಿ ಹುಟ್ಟಿ ಕೂಗುವ ಕಪ್ಪೆಗಳಿಗೆಲ್ಲ ಅಲ್ಲಲ್ಲಿಗಾಹಾರ ತಂದೀವರಾರು ಬಲ್ಲಿದನು ಕಾಗಿನೆಲೆಯಾದಿಕೇಶವರಾಯ ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ ||4||

Thoughts & Reflections

0

No reflections shared yet. Be the first to share your thoughts!

Share your thought